ಚಿತ್ತಾಪುರ: ಒಳಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಈ ವರದಿಯನ್ನು ತಿರಸ್ಕರಿ ಮೀಸಲಾತಿ ವರದಿ ಕೈಬಿಡಬೇಕು ಎಂದು ಆಗ್ರಹಿಸಿ ಮಾರ್ಚ್ 25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಮರೆಪ್ಪ ಹಳ್ಳಿ ತಿಳಿಸಿದರು.
ಪಟ್ಟಣದ ಬುದ್ಧ ವಿಹಾರದಲ್ಲಿ 'ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟ'ದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಒಳಮೀಸಲಾತಿ ಕುರಿತಂತೆ ನಾಗಮೋಹನ್ ದಾಸ್ ಆಯೋಗ ನೀಡಿರುವ ವರದಿಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು "ಈ ವರದಿಯು ಯಾವುದೇ ನಿಖರವಾದ ಹಾಗೂ ವೈಜ್ಞಾನಿಕ ಸಮೀಕ್ಷೆಯ ಆಧಾರದ ಮೇಲೆ ಸಿದ್ಧವಾಗಿಲ್ಲ. ಪರಿಶಿಷ್ಟ ಜಾತಿಯಲ್ಲಿರುವ ಸಮಗ್ರ ಉಪಜಾತಿಗಳ ನಿಖರ ಜನಸಂಖ್ಯೆ, ಅವರ ಪ್ರಸ್ತುತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಸರಿಯಾಗಿ ಅಧ್ಯಯನ ಮಾಡದೆ, ಕೇವಲ ಮೇಲ್ನೋಟದ ಅಂಕಿ-ಅಂಶಗಳ ಆಧಾರದ ಮೇಲೆ ವರದಿ ನೀಡಲಾಗಿದೆ. ಇದರಿಂದ ಬಲಗೈ ಸಮುದಾಯಗಳಿಗೆ ಹಾಗೂ ಅತ್ಯಂತ ಹಿಂದುಳಿದ ಅಲೆಮಾರಿ ಉಪಜಾತಿಗಳಿಗೆ ತೀವ್ರ ಅನ್ಯಾಯವಾಗಲಿದೆ. ಸಮುದಾಯಗಳ ನಡುವೆ ಕಂದಕ ಸೃಷ್ಟಿಸುವ ಇಂತಹ ದೋಷಪೂರಿತ ಹಾಗೂ ಅವೈಜ್ಞಾನಿಕ ವರದಿಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಬಾರದು" ಎಂದು ವಿಸ್ತೃತವಾಗಿ ವಿವರಿಸಿದರು.
ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ಹಾಗೂ ಈ ಅವೈಜ್ಞಾನಿಕ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಒತ್ತಾಯಿಸಿ, 'ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟ'ದ ನೇತೃತ್ವದಲ್ಲಿ ದಿನಾಂಕ: 25-03-2026 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿದೆ.
"ನಮ್ಮ ಸಮುದಾಯದ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಈ ಹೋರಾಟಕ್ಕೆ ಪ್ರತಿಯೊಬ್ಬರ ಬೆಂಬಲ ಅಗತ್ಯವಿದೆ. ಚಿತ್ತಾಪುರ ತಾಲೂಕು ಸೇರಿದಂತೆ ಜಿಲ್ಲೆಯ ಮೂಲೆ-ಮೂಲೆಗಳಿಂದ ಸಮುದಾಯದ ಮುಖಂಡರು, ಯುವಕರು, ಮಹಿಳೆಯರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಹೋರಾಟವನ್ನು ಯಶಸ್ವಿಗೊಳಿಸಬೇಕು" ಎಂದು ಕಳಕಳಿಯ ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಸುನಿಲ್ ದೊಡ್ಡಮನಿ, ಶಿವರುದ್ರ ಬೇಣಿ, ಮಲ್ಲಪ್ಪ ಹೂಸಮನಿ, ಮಲ್ಲಿಕಾರ್ಜುನ ಬೆಣ್ಣೂರಕರ್, ಸುರೇಶ್ ಮೆಂಗನ್, ಸಾಯಬಣ ಬನಹಟಿ, ಶರಣಬಸು ಶಿರೂಳಕರ್, ದೇವಿಂದ್ರ ಕುಮಸಿ, ಹರಳಯ್ಯ ಬಡಿಗೇರ್, ಶಿವಮೂರ್ತಿ ಪಾಮನೂರ, ಸೂರ್ಯಕಾಂತ ರದ್ದೇವಾಡಿ, ಶರಣು ನಾಟೀಕಾರ್, ನಾಗೆಂದ್ರ ಬುರ್ಲಿ, ಮಲ್ಲಿಕಾರ್ಜುನ ಮುಡಬೂಳಕರ್, ಜಗನ್ನಾಥ ಮುಡಬೂಳಕರ್, ಸೇರಿದಂತೆ ಇತರರು ಇದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ