ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೇಡಂ ಸಹಾಯಕ ಆಯುಕ್ತರಾದ ಪ್ರಭುರೆಡ್ಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವು ನಿರ್ವಹಣೆ ಕುರಿತ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲೂಕಿನ ಯಾವುದೇ ಹಳ್ಳಿ ಅಥವಾ ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು. ಪೈಪ್‌ಲೈನ್ ದುರಸ್ತಿ ಅಥವಾ ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧರಾಗಿರಬೇಕು,
ಬೇಸಿಗೆಯ ಅವಧಿಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ನೋಡಿಕೊಳ್ಳುವುದು ಪಶುಸಂಗೋಪನಾ ಇಲಾಖೆ ಮತ್ತು ಗ್ರಾಮ ಪಂಚಾಯಿತಿಗಳ ಜವಾಬ್ದಾರಿಯಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಮೇವು ಬ್ಯಾಂಕ್‌ಗಳನ್ನು ಸಕ್ರಿಯಗೊಳಿಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು.
ಮುಂಗಾರು ಮಳೆ ಆರಂಭವಾಗುವವರೆಗಿನ ಅವಧಿಯು ಅತ್ಯಂತ ನಿರ್ಣಾಯಕವಾಗಿದ್ದು, ಯಾವುದೇ ಹಂತದಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್-2 ತಹಸೀಲ್ದಾರ ರಾಜಕುಮಾರ ಮರತೂರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಆಕ್ರಂ ಪಾಶಾ, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ