ಮಂಗಳವಾರ, ಏಪ್ರಿಲ್ 21, 2026

ಬಸವ ಜಯಂತಿ ಸಂಭ್ರಮ: 70 ಜೋಡಿ ಎತ್ತುಗಳೊಂದಿಗೆ ಅದ್ದೂರಿ ಮೆರವಣಿಗೆ.

​ಚಿತ್ತಾಪುರ: ತಾಲೂಕು ಆಡಳಿತ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಜಯಂತಿ ಉತ್ಸವ ಆಚರಣೆ ಸಮಿತಿ ಸಹಯೋಗದಲ್ಲಿ ಜಗಜ್ಯೋತಿ ಬಸವೇಶ್ವರರ 893ನೇ ಜಯಂತ್ಯುತ್ಸವವನ್ನು ಸೋಮವಾರ ಪಟ್ಟಣದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಪ್ರಜಾ ಸೌಧದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿಶೇಷ ಪೂಜೆ ನೆರವೇರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಸವಣ್ಣನವರ ತತ್ವಗಳು ಇಂದಿಗೂ ಸಾರ್ವಕಾಲಿಕವಾಗಿದ್ದು, ಸಮಾಜದಲ್ಲಿ ಸಮಾನತೆ ತರುವಲ್ಲಿ ಅವರ ಕೊಡುಗೆ ಅಪಾರ ಎಂದರು.

ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿತು. ಬಸವೇಶ್ವರರ ಭಾವಚಿತ್ರದೊಂದಿಗೆ ಸುಮಾರು 70 ಜೋಡಿ ಅಲಂಕೃತ ಎತ್ತುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಮೆರವಣಿಗೆಯುದ್ದಕ್ಕೂ ಬಸವಣ್ಣನವರ ಪರ ಜೈಘೋಷಗಳು ಮೊಳಗಿದವು. ಮೆರವಣಿಗೆಯು ಬಸವೇಶ್ವರ ವೃತ್ತಕ್ಕೆ ತಲುಪಿದ ನಂತರ ಸಮಾಪ್ತಿಗೊಂಡಿತು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ತಾಪಂ ಇಒ ಮಹ್ಮದ್ ಅಕ್ರಂ ಪಾಷಾ, ಸಿಪಿಐ ಎಸ್.ಸಿ.ಪಾಟೀಲ, ಪಿಎಸ್‌ಐ ಮಂಜುನಾಥ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರೆ ಹಾಗೂ ಪಶು ವೈದ್ಯಾಧಿಕಾರಿ ಡಾ. ಶಂಕರ ಕಣ್ಣಿ ಉಪಸ್ಥಿತರಿದ್ದರು.
​ಜಯಂತಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಬೆಳಗುಂಪಾ, ಮಹಾಸಭಾ ತಾಲೂಕು ಗೌರವಾಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಅಧ್ಯಕ್ಷ ನಾಗರಾಜ ಭಂಕಲಗಿ ಸೇರಿದಂತೆ ಮುಖಂಡರಾದ ಸೋಮಶೇಖರ ಪಾಟೀಲ ಬೆಳಗುಂಪಾ, ನಾಗರೆಡ್ಡಿ ಪಾಟೀಲ ಕರದಾಳ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ಜಗಣ್ಣಗೌಡ ರಾಮತೀರ್ಥ, ವೀರಣ್ಣಗೌಡ ಪರಸರೆಡ್ಡಿ, ಭೀಮಣ್ಣ ಸಾಲಿ, ರವೀಂದ್ರ ಸಜ್ಜನಶೆಟ್ಟಿ, ಮಲ್ಲಿಕಾರ್ಜುನ ಕಾಳಗಿ, ಅಣ್ಣಾರಾವ ಪಾಟೀಲ ಮುಡಬೂಳ, ಕುಂಬಾರ ಸಮಾಜದ ಅಧ್ಯಕ್ಷ, ವಿಶ್ವನಾಥ ಕುಂಬಾರ ಹಾಗೂ ಸಾವಿರಾರು ಭಕ್ತಾದಿಗಳು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ವೀರಶೈವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಡಿಗಲ್ಲು; ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ.

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ರಸ್ತೆಯಲ್ಲಿರುವ ವೀರಶೈವ ಸಮಾಜದ ನಿವೇಶನದಲ್ಲಿ ಅಂದಾಜು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುಸಜ್ಜಿತ ...