ಚಿತ್ತಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ಏಳಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳಿಗೆ ತರಕಾರಿ ಬೀಜಗಳ ಕಿಟ್ ವಿತರಿಸಿ ಮಾತನಾಡಿದ ಅವರು
"ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರಿಗಾಗಿ ಒಟ್ಟು ₹2,590 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಇದರಲ್ಲಿ ₹656 ಕೋಟಿ ಬೆಳೆ ವಿಮೆಯೂ ಸೇರಿದೆ. ಇಷ್ಟೊಂದು ಬೃಹತ್ ಮೊತ್ತದ ಪರಿಹಾರ ಪಡೆದ ಜಿಲ್ಲೆ ರಾಜ್ಯದಲ್ಲೇ ಮತ್ತೊಂದಿಲ್ಲ," ಎಂದು ಸಚಿವರು ಹೆಮ್ಮೆಯಿಂದ ಹೇಳಿದರು. ಹಿಂದೆ ಜಿಲ್ಲೆಯಲ್ಲಿ ತೊಗರಿ ಬೆಳೆಗೆ ನೆಟೆ ರೋಗ ತಗುಲಿ 2 ಲಕ್ಷ ಹೆಕ್ಟೇರ್ ಹಾನಿಯಾದಾಗ ₹182 ಕೋಟಿ ಬಿಡುಗಡೆ ಮಾಡಲಾಗಿತ್ತು. ಆದರೆ, ಈ ಹಿಂದೆ ಬಿಜೆಪಿ ಸರ್ಕಾರ ಬರ ಮತ್ತು ನೆರೆಯ ಸಂದರ್ಭದಲ್ಲಿ ಜಿಲ್ಲೆಗೆ ಕೇವಲ ₹22 ಕೋಟಿ ನೀಡಿತ್ತು ಎಂದು ಅವರು ಹೋಲಿಕೆ ಮಾಡಿದರು.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, "ಕೇಂದ್ರ ಸರ್ಕಾರ ರೈತ ವಿರೋಧಿ ನಿಲುವು ತಳೆದು ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತಡೆಹಿಡಿದಿತ್ತು. ಇದಕ್ಕಾಗಿ ರಾಜ್ಯ ಸಚಿವ ಸಂಪುಟವೇ ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಾಯಿತು. ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯವೊಂದು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಚೀಮಾರಿ ಹಾಕಿದ ನಂತರವಷ್ಟೇ ಕೇಂದ್ರ ಅನುದಾನ ಬಿಡುಗಡೆ ಮಾಡಿತು. ಇದು ನಮ್ಮ ರೈತಪರ ಬದ್ಧತೆಗೆ ಸಾಕ್ಷಿ," ಎಂದರು.
ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ (ಶೀತಲೀಕರಣ ಘಟಕ) ನಿರ್ಮಾಣ ಮತ್ತು ಪಲ್ಸ್ ಪ್ರೋಟೀನ್ ಹಬ್ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು. ಈಗಾಗಲೇ ಡ್ರೋನ್ ಮೂಲಕ ಕೀಟನಾಶಕ ಸಿಂಪಡಿಸುವ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಿತ ಯಂತ್ರೋಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಿಎಪಿ ಗೊಬ್ಬರದ ಬದಲಿಗೆ ಸಾವಯವ ಗೊಬ್ಬರ ಬಳಸುವ ಕುರಿತಾದ ಮಾಹಿತಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಎಂಎಲ್ಸಿ ಜಗದೇವ ಗುತ್ತೇದಾರ ಮಾತನಾಡಿ, ಪ್ರಿಯಾಂಕ್ ಖರ್ಗೆ ಬಂದ ಮೇಲೆ ಚಿತ್ತಾಪುರ ಹಾಗೂ ಕಲಬುರಗಿ ಚಿತ್ರಣವೇ ಬದಲಾಗಿದೆ, ಮಲ್ಲಿಕಾರ್ಜುನ ಖರ್ಗೆ 371ಜೆ ಕಲಂ ನೀಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ, ಅದೇ ರೀತಿ ಪ್ರಿಯಾಂಕ್ ಖರ್ಗೆ ತಂದೆಗೆ ತಕ್ಕ ಮಗನಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ವಿಧಾನಸಭಾ ಮತ್ತು ವಿಧಾನ ಪರಿಷತ್ ನಲ್ಲಿ ಹಾಗೂ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡುವ ಏಕೈಕ ನಾಯಕ ಪ್ರಿಯಾಂಕ್ ಖರ್ಗೆ ಎಂದು ಬಣ್ಣಿಸಿದರು.
ತೊಗರಿ ಮಂಡಳಿ ಅಧ್ಯಕ್ಷ ಸೈಯದ್ ಮಹೆಮೂದ್ ಚಿಸ್ತಿ ಸಾಹೇಬ್, ಕೆಕೆಆರ್'ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಸಿಇಒ ಭಂವರ್ ಸಿಂಗ್ ಮೀನಾ, ಎಸ್ ಪಿ ಅತ್ತೂರು ಶ್ರೀನಿವಾಸಲು, ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್, ಎಸಿ ಪ್ರಭು ರೆಡ್ಡಿ, ತಹಸೀಲ್ದಾರ್ ನಾಗಯ್ಯ ಹಿರೇಮಠ, ತಾಪಂ ಇಒ ಮಹ್ಮದ್ ಅಕ್ರಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಕೃಷಿ ಅಧಿಕಾರಿ ಸಂಜೀವ್ ಮಾನಕರೆ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಪಿಎಲ್ಲಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಡಾ.ಮಹಾಂತಗೌಡ ಪಾಟೀಲ, ದೇವಿಂದ್ರ ಯಾಬಾಳ, ಸಂಜಯ್ ಬುಳಕರ್ ಸೇರಿದಂತೆ ಇತರರು ಇದ್ದರು.ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರಾದ ಸಂತೋಷ ಇನಾಮದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ತೋಟಗಾರಿಕೆ ಇಲಾಖೆ ಹಿರಿಯ ನಿರ್ದೇಶಕರಾದ ರಾಜಕುಮಾರ್ ಗೋವಿನ್ ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ