ಚಿತ್ತಾಪುರ: ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸಿಗಲಿ ಎಂದು ಹಾರೈಸಿ, ತಾಲ್ಲೂಕಿನ ಪ್ರಸಿದ್ಧ ಶ್ರೀ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ದೇವಿಂದ್ರ ಯಾಬಾಳ ರವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಶೀಘ್ರದಲ್ಲೇ ಉಪಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಪ್ರಾರ್ಥಿಸಿ, ದೇವಸ್ಥಾನದ ಮುಂಭಾಗದಲ್ಲಿ ನೂರಾರು ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ದೇವಿಂದ್ರ ಯಾಬಾಳ ಅವರು, ಮಾತನಾಡಿ "ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರ ಮಾತ್ರವಲ್ಲದೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ದಕ್ಷ ಆಡಳಿತ ಮತ್ತು ದೂರದೃಷ್ಟಿಯ ನಾಯಕತ್ವವನ್ನು ಗುರುತಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವುದು ಈ ಭಾಗದ ಜನರ ಮತ್ತು ಯುವ ಸಮೂಹದ ತೀವ್ರ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ನಾಗಾವಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನೂರಾರು ತೆಂಗಿನಕಾಯಿಗಳನ್ನು ಒಡೆದು ಪ್ರಾರ್ಥಿಸಿದ್ದೇವೆ. ದೇವಿಯ ಆಶೀರ್ವಾದದಿಂದ ಅವರಿಗೆ ಶೀಘ್ರದಲ್ಲೇ ಉನ್ನತ ಸ್ಥಾನ ಸಿಗುವ ವಿಶ್ವಾಸವಿದೆ," ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಮಾಜಿ ಸದಸ್ಯ ಶಿವರುದ್ರ ಬೇಣಿ, ಹಣಮಂತ ಸಂಕನೂರ, ರಾಮಲಿಂಗ ಬಾನರ್, ಸಂತೋಷ್ ಪೂಜಾರಿ, ವಿನ್ನು ಕುಮಾರ್, ರವಿಸಾಗರ ಹೊಸಮನಿ, ಶೀವಯೋಗಿ ರಾವೂರ, ಕರಣಕುಮಾರ ಅಲ್ಲೂರ್, ಯುವ ಕಾಂಗ್ರೆಸ್‌ನ ಪ್ರಮುಖ ಪದಾಧಿಕಾರಿಗಳು, ಉಪಸ್ಥಿತರಿದ್ದು, ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಘೋಷಣೆಗಳನ್ನು ಕೂಗಿ ಬೆಂಬಲ ವ್ಯಕ್ತಪಡಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ