ಐತಿಹಾಸಿಕ ತಾಣಗಳಿಗೆ ಜಿಲ್ಲಾಧಿಕಾರಿ ಭೇಟಿ: ಕಾಮಗಾರಿಗಳ ಪರಿಶೀಲನೆ.

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ತಾಣಗಳ ಅಭಿವೃದ್ಧಿ ಮತ್ತು ಜಿರ್ಣೋದ್ಧಾರ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರು ಮಂಗಳವಾರ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲಿಗೆ ಪಟ್ಟಣದ ಇತಿಹಾಸ ಪ್ರಸಿದ್ಧ ನಾಗಾವಿ ಎಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತದನಂತರ ಐತಿಹಾಸಿಕ ಹಿನ್ನೆಲೆಯುಳ್ಳ 60 ಕಂಬದ ದೇವಸ್ಥಾನ, ನಂದಿ ಬಾವಿ ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪುರಾತತ್ವ ಇಲಾಖೆಯ ಸ್ಥಳಗಳನ್ನು ವೀಕ್ಷಿಸಿದ ಅವರು, ಇಲಾಖೆಯಿಂದ ಪ್ರಸ್ತುತ ನಡೆಯುತ್ತಿರುವ ಜಿರ್ಣೋದ್ಧಾರ ಕಾಮಗಾರಿಗಳ ನೀಲನಕ್ಷೆಯನ್ನು (Blue Print) ಅತ್ಯಂತ ಕೂಲಂಕಷವಾಗಿ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಕಾಳಗಿಯ ನೀಲಕಂಠ ಕಾಳೇಶ್ವರ ಹಾಗೂ ಸೂರ್ಯನಾರಾಯಣ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು. ಬಳಿಕ ಸನ್ನತಿ ಮತ್ತು ಕನಗನಹಳ್ಳಿಯ ಪ್ರಮುಖ ಪುರಾತತ್ವ ಸ್ಥಳಗಳಿಗೂ ಭೇಟಿ ನೀಡಿ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತರಾದ ಪ್ರಭು ರೆಡ್ಡಿ, ಕಲಬುರಗಿ ಸಹಾಯಕ ಆಯುಕ್ತರಾದ ಸಾಹಿತ್ಯ ಆಲದಕಟ್ಟಿ, ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಪುರಸಭೆ ಮುಖ್ಯಧಿಕಾರಿ ಭಾರತಿ ದಂಡೋತಿ, ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಯ ಉನ್ನತಾಧಿಕಾರಿಗಳು ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Jtv kannada

ಜನತೆಯ ಸುದ್ದಿ ವಾಹಿನಿ, ನೇರ ದಿಟ್ಟ ನಿರಂತರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು