ಚಿತ್ತಾಪುರ: ಪ್ರತಿಯೊಬ್ಬ ನಾಗರಿಕನಿಗೂ ಪರಿಸರವನ್ನು ರಕ್ಷಿಸುವ ಸಾಂವಿಧಾನಿಕ ಮತ್ತು ಕಾನೂನಾತ್ಮಕ ಜವಾಬ್ದಾರಿ ಇದೆ ಎಂದು ಕಲಬುರಗಿಯ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಿರಾಜುದ್ದೀನ್ ಎ. ತಿಳಿಸಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಪ್ರಾದೇಶಿಕ ಅರಣ್ಯ ವಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂನ್ 05ರ "ವಿಶ್ವ ಪರಿಸರ ದಿನ" ಪ್ರಯುಕ್ತ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕೇವಲ ಕಾನೂನುಗಳಿದ್ದರೆ ಸಾಲದು, ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡುವುದು ಅತ್ಯಗತ್ಯ. ಪರಿಸರವನ್ನು ನಾಶಪಡಿಸುವುದು ಕಾನೂನುಬಾಹಿರ ಮಾತ್ರವಲ್ಲ, ಅದು ಮಾನವಕುಲದ ಅಸ್ತಿತ್ವಕ್ಕೆ ಧಕ್ಕೆ ತರುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಮಾರ್ಮಿಕವಾಗಿ ನುಡಿದರು.
ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ಬಡಿಗೇರ ಮಾತನಾಡಿ, "ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮರಗಳು ಭೂಮಿಯ ಶ್ವಾಸಕೋಶಗಳಾಗಿವೆ. ಹೆಚ್ಚು ಹೆಚ್ಚು ಮರಗಳನ್ನು ನೆಡುವುದರಿಂದ ಶುದ್ಧ ಗಾಳಿ, ಉತ್ತಮ ಹವಾಮಾನ ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಸಾಧ್ಯವಾಗುತ್ತದೆ" ಎಂದರು.
ಮುಂದುವರಿದು ಮಾತನಾಡಿದ ಅವರು, ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.
"ಇಂದು ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ದೊಡ್ಡ ಸವಾಲಾಗಿದೆ. ವಿಶೇಷವಾಗಿ ಏಕಬಳಕೆ (ಸಿಂಗಲ್ ಯೂಸ್) ಪ್ಲಾಸ್ಟಿಕ್ ಭೂಮಿ, ನೀರು ಹಾಗೂ ವನ್ಯಜೀವಿಗಳಿಗೆ ತೀವ್ರ ಹಾನಿಯನ್ನುಂಟು ಮಾಡುತ್ತದೆ. ಆದ್ದರಿಂದ ನಾವು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ, ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸಬೇಕು. ಈ ವಿಶ್ವ ಪರಿಸರ ದಿನದಂದು ಹೆಚ್ಚು ಹೆಚ್ಚು ಮರಗಳನ್ನು ನೆಡುವ, ನೆಟ್ಟ ಮರಗಳನ್ನು ಸಂರಕ್ಷಿಸುವ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಸಂಕಲ್ಪ ಮಾಡೋಣ" ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಸೋಮಶೇಖರ ಬಿ. ಕರದಾಳ, ಸಿವಿಲ್ ನ್ಯಾಯಾಧೀಶರಾದ ಕಿಶನ್ ಬಿ. ಮಾಡಲಗಿ, ಅಭಿಷೇಕ್ ಜೋಶಿ, ಸಹಾಯಕ ಸರ್ಕಾರಿ ಅಭಿಯೋಜಕಿ ಶ್ರೀಮತಿ ಅಂಜನಾದೇವಿ ಆರ್., ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಶ್ರೀಮತಿ ವಿ. ಆರ್. ಕಾಂತ, ಹಾಗೂ ಪೊಲೀಸ್ ವೃತ್ತ ನಿರೀಕ್ಷಕರಾದ ಎಸ್. ಸಿ. ಪಾಟೀಲ್ ಸೇರಿದಂತೆ ಹಲವು ಗಣ್ಯರು, ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲರು ಅರಣ್ಯ ಇಲಾಖೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕಾಮೆಂಟ್ ಪೋಸ್ಟ್ ಮಾಡಿ