ಚಿತ್ತಾಪುರ: ನೀಟ್ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈಗಾಗಲೇ 13 ಜನರನ್ನು ಬಂಧಿಸಿ ಜೈಲಿಗಟ್ಟಿದೆ. ಅಷ್ಟೇ ಅಲ್ಲದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯ (ಫಾಸ್ಟ್ ಟ್ರ್ಯಾಕ್ ಕೋರ್ಟ್) ಸ್ಥಾಪಿಸುವ ದಿಟ್ಟ ಕ್ರಮ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಆರ್.ರುದ್ರಯ್ಯ ಹೇಳಿದ್ದಾರೆ.
ಪಟ್ಟಣದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜಿಲ್ಲಾಡಳಿತದ ವೈಫಲ್ಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ "ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ 21 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ವಿಷಾದನೀಯ ಸಂಗತಿ. ಇಂತಹ ದುರಂತಗಳು ಸಂಭವಿಸಬಾರದಿತ್ತು. ಆದರೆ, ವಿದ್ಯಾರ್ಥಿಗಳ ಭವಿಷ್ಯದ ಸೂತಕವನ್ನೇ ಬಂಡವಾಳ ಮಾಡಿಕೊಂಡು, ಸಿಜೆಪಿ ಹಾಗೂ ವಿವಿಧ ಸಂಘಟನೆಗಳು ನಡೆಸಿದ ಹೋರಾಟದಲ್ಲಿ ಕಾಂಗ್ರೆಸ್ ಭಾಗಿಯಾಗಿ ದೇಶದಲ್ಲಿ ಅಶಾಂತಿ ವಾತಾವರಣ ನಿರ್ಮಿಸುತ್ತಿದೆ" ಎಂದು ಖಂಡಿಸಿದರು.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ತಕ್ಷಣ ಸಚಿವರ ರಾಜೀನಾಮೆ ಕೇಳುವುದು ಕಾಂಗ್ರೆಸ್‌ನ ಇತ್ಯರ್ಥವಲ್ಲದ ರಾಜಕೀಯ. "ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಮೂರು ಜನ ಆರೋಪಿಗಳು ಪರಾರಿಯಾದಾಗ ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಿದ್ದರೇ?" ಎಂದು ಪ್ರಶ್ನಿಸಿದರು.
ತಾಲೂಕು ಸೇರಿದಂತೆ ಇಡೀ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಿರಂಕುಶ ಆಡಳಿತ ನಡೆಯುತ್ತಿದೆ. "ಸಂವಿಧಾನದ ಬಗ್ಗೆ ದೊಡ್ಡದಾಗಿ ಮಾತನಾಡುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಡುತ್ತಿರುವುದು ಮಾತ್ರ ಸಂಪೂರ್ಣ ಅಸಂವಿಧಾನಿಕ ಕೆಲಸ. ತಮ್ಮ ಆಡಳಿತವನ್ನು ಪ್ರಶ್ನೆ ಮಾಡುವವರ ಮೇಲೆ ಸುಳ್ಳು ಕೇಸ್ ಹಾಕಿ ಬೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ" ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಮಳೆಯಿಲ್ಲದೆ ಭೀಕರ ಬರಗಾಲದ ಪರಿಸ್ಠಿತಿ ನಿರ್ಮಾಣವಾಗಿದೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದರೂ ಸಚಿವರಿಗೆ ರೈತರ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ. ಪ್ರಸ್ತುತ ಜಿಲ್ಲೆಯಲ್ಲಿ ರೈತರ ಅಳಲು ಕೇಳುವವರೇ ಇಲ್ಲದಂತಾಗಿದೆ ಎಂದು ಟೀಕಿಸಿದರು.
"ಹಿಂದೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿದ್ದಾಗ ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಮೂರು ಬಾರಿ ಸೋರಿಕೆಯಾಗಿತ್ತು. ಈಗ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ಮೋದಿ ಅವರ ರಾಜೀನಾಮೆ ಕೇಳುತ್ತಿರುವುದು ಇವರ ಇರಟು ಧೋರಣೆಗೆ ಹಿಡಿದ ಕನ್ನಡಿ."
— ಆರ್.ರುದ್ರಯ್ಯ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಿಶಾಲ್ ದರ್ಗಿ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್, ಪುರಸಭೆ ಮಾಜಿ ಸದಸ್ಯರಾದ ಶಾಮಣ್ಣ ಮೇಧಾ, ದಶರಥ ದೊಡ್ಡಮನಿ, ಬಿಜೆಪಿ ನಗರ ಯುವ ಅಧ್ಯಕ್ಷ ಸಂಗಮೇಶ ಪಾಟೀಲ ಹಾಗೂ ಮುಖಂಡರಾದ ಅಕ್ಕಮಹಾದೇವಿ ನಾಗೇಶ್, ರವಿ ಮದನಕರ್, ಬಂದೆಪ್ಪ ಕಟ್ಟಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.