ಚಿತ್ತಾಪುರ: "ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತರಲು ಲಕ್ಷಾಂತರ ದೇಶಪ್ರೇಮಿಗಳು ಹೋರಾಟ ನಡೆಸಿದ್ದಾರೆ. ಅವರ ಧೈರ್ಯ ಮತ್ತು ಬಲಿದಾನದ ಫಲವಾಗಿ ಇಂದು ನಾವು ಸ್ವತಂತ್ರ ವಾತಾವರಣದಲ್ಲಿದ್ದೇವೆ. ನಮಗೆ ಸಿಕ್ಕಿರುವ ಸ್ವಾತಂತ್ರ್ಯದಲ್ಲಿ ಸಂವಿಧಾನದ ಮೌಲ್ಯಗಳನ್ನು ಗೌರವಿಸಿ, ಉತ್ತಮ ಪ್ರಜೆಗಳಾಗೋಣ" ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ಪಟ್ಟಣದ ಪ್ರಜಾ ಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು "ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಸ್ವಾತಂತ್ರ್ಯ ಸಿಕ್ಕ ಹೊಸದರಲ್ಲಿ ಆಹಾರಕ್ಕೂ ಪರದೇಶಗಳನ್ನು ಅವಲಂಬಿಸಿದ್ದ ನಮ್ಮ ದೇಶ, ಇಂದು ಸಂಪೂರ್ಣ ಸ್ವಾವಲಂಬಿಯಾಗಿದೆ. ವಿಜ್ಞಾನ, ತಂತ್ರಜ್ಞಾನ, ರಕ್ಷಣೆ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನದಲ್ಲಿದ್ದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ" ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಮಾತನಾಡಿ, "ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಪ್ರಿಯಾಂಕ್ ಖರ್ಗೆಯವರು ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಇಂದಿನ ತಂತ್ರಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ತಾಲೂಕಿನ 21 ಶಾಲೆಗಳಲ್ಲಿ 'ಎಐ (Artificial Intelligence)' ತಂತ್ರಜ್ಞಾನವನ್ನು ಪ್ರೌಢಶಾಲೆಯ ಹಂತದಲ್ಲೇ ಮಕ್ಕಳಿಗೆ ನೀಡಲಾಗುತ್ತಿದೆ. ಇದರಿಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ತುಂಬಾ ಸಹಕಾರಿಯಾಗಲಿದೆ" ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ಹಾಗೂ ಡಿಗ್ರಿ ಕಾಲೇಜಿನ ಪ್ರಾಚಾರ್ಯ ಪದ್ಮಣ್ಣ ಅವರು ಮಾತನಾಡಿದರು.
ವೇದಿಕೆಯಲ್ಲಿ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಟಿಎಪಿಸಿಎಂಎಸ್ ಅಧ್ಯಕ್ಷ ದೇವೇಂದ್ರ ಅರಣಕಲ್, ತಾಪಂ ಇಒ ಮಹಮ್ಮದ್ ಅಕ್ರಂ ಪಾಷಾ, ಸಿಪಿಐ ಸಿ.ಎಸ್.ಪಾಟೀಲ, ಮುಖ್ಯಾದಿಕಾರಿ ಭಾರತಿ ದಂಡೋತಿ, ಕೃಷಿ ಅಧಿಕಾರಿ ಸಂಜೀವಕುಮಾರ ಮಾನಕರೆ, ಸಿಡಿಪಿಒ ಆರತಿ ತುಪ್ಪದ್ ಸೇರಿದಂತೆ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಪಶುಸಂಗೋಪನೆ ಇಲಾಖೆ ಎಡಿಎ ಡಾ. ಶಂಕರ ಕಣ್ಣಿ ಕಾರ್ಯಕ್ರಮ ನಿರೂಪಿಸಿದರು, ಶಿವಶರಣಪ್ಪ ಮಂಠಾಳೆ ವಂದಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ತದನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.