ಶಿಕ್ಷಕರ ಸೇವೆಗೆ ಸನ್ಮಾನ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
ಚಿತ್ತಾಪುರ: ವಿದ್ಯಾರ್ಥಿಗಳಲ್ಲಿ ಜ್ಞಾನ, ಶಿಸ್ತು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜಕ್ಕೆ ಸತ್ಪ್ರಜೆಗಳನ್ನು ನೀಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಶಿಕ್ಷಣ ಪ್ರೇಮಿ ನಾಗರೆಡ್ಡಿ ಪಾಟೀಲ್ ಕರದಾಳ ಹೇಳಿದರು.
ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ವಿವಿಧ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ 2026-27ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ ಅವರು ಶಿಕ್ಷಕ ವೃತ್ತಿ ಕೇವಲ ಪಾಠ ಬೋಧಿಸುವ ಕೆಲಸವಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಮಾರ್ಗದರ್ಶನ ಅತ್ಯಂತ ಪರಿಣಾಮಕಾರಿಯಾಗಿದೆ. ಪ್ರತಿಯೊಬ್ಬ ಶಿಕ್ಷಕರು ತಮ್ಮ ವೃತ್ತಿಯ ಮಹತ್ವವನ್ನು ಅರಿತು ಮಕ್ಕಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದವರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದಾಗ ಮಾತ್ರ ಶಿಕ್ಷಣದ ನಿಜವಾದ ಉದ್ದೇಶ ಈಡೇರಲಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಲು ಶಿಕ್ಷಕರು ಇನ್ನಷ್ಟು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ, ಶಿಕ್ಷಕರು ತಮ್ಮ ವೈಯಕ್ತಿಕ ಜವಾಬ್ದಾರಿಗಳ ನಡುವೆಯೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಗಮನ ನೀಡಬೇಕು. ಒಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಕರಿಂದ ಆಗುವ ಸಕಾರಾತ್ಮಕ ಬದಲಾವಣೆ ದೊಡ್ಡ ಸಾಧನೆಗೆ ಕಾರಣವಾಗಬಹುದು. ಮಕ್ಕಳನ್ನು ಉತ್ತಮ ಹಾದಿಯಲ್ಲಿ ಮುನ್ನಡೆಸುವುದೇ ಶಿಕ್ಷಕರಿಗೆ ದೊರೆಯುವ ಶ್ರೇಷ್ಠ ಗೌರವವಾಗಿದೆ ಎಂದರು.
“ಒಬ್ಬ ಉತ್ತಮ ಶಿಕ್ಷಕ ವಿದ್ಯಾರ್ಥಿಯ ಜೀವನಕ್ಕೆ ದಿಕ್ಕು ತೋರಿಸಬಲ್ಲ. ಆದ್ದರಿಂದ ಶಿಕ್ಷಕರು ತಮ್ಮ ವೃತ್ತಿಯ ಘನತೆಯನ್ನು ಕಾಪಾಡಿಕೊಂಡು ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು”
- ಶಶಿಧರ ಬಿರಾದಾರ
ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ತಾಪೂರ
ಕ್ಷೇತ್ರ ಸಮನ್ವಯಾಧಿಕಾರಿ ಆದಪ್ಪ ಸಜ್ಜನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಟಿಎಪಿಸಿಎಂಎಸ್ ಅಧ್ಯಕ್ಷ ದೇವಿಂದ್ರ ಅರಣಕಲ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ನಾಲವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರನ್ನೂ ಸನ್ಮಾನಿಸಿ ಅವರ ಸೇವೆಯನ್ನು ಸ್ಮರಿಸಲಾಯಿತು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು. ಶಿವಲೀಲಾ ಕಲಗುರ್ಕಿ ಪ್ರಾರ್ಥಿಸಿದರು. ಆದಪ್ಪ ಬಗಲಿ ಸ್ವಾಗತಿಸಿದರು. ಮಹಾಂತೇಶ ಕಾರ್ಯಕ್ರಮ ನಿರೂಪಿಸಿದರು.