ಚಿತ್ತಾಪುರ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಮತ್ತು ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ತಾಲೂಕಿನ ಎಲ್ಲಾ ಸಮಾಜದ ಮುಖಂಡರು, ಭಕ್ತಾದಿಗಳು, ಸಾರ್ವಜನಿಕರು ಹಾಗೂ ಅಧಿಕಾರಿಗಳು ಕೈಜೋಡಿಸಬೇಕು ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ನಾಗಯ್ಯ ಹಿರೇಮಠ ಕರೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ನಾಗಾವಿ ಯಲ್ಲಮ್ಮ ಪಲ್ಲಕ್ಕಿ (ಜಾತ್ರಾ ಮಹೋತ್ಸವ) ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ನಾನು ಇಲ್ಲಿ ಅಧಿಕಾರಿಯಾಗಿ ಅಲ್ಲ, ಒಬ್ಬ ದೇವಿಯ ಭಕ್ತನಾಗಿ ಬಂದಿದ್ದೇನೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು" ಎಂದು ಅವರು ಭರವಸೆ ನೀಡಿದರು.
ಹೊರ ರಾಜ್ಯಗಳಿಂದ ಹಾಗೂ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಯಿತು. ದೇವಸ್ಥಾನಕ್ಕೆ ಹೋಗುವ ರಸ್ತೆಯ ಇರುಬದಿಯ ಗಿಡಗಂಟಿಗಳನ್ನು ತೆರವುಗೊಳಿಸಿ ನೈರ್ಮಲ್ಯ ಕಾಪಾಡಬೇಕು, ಕುಡಿಯುವ ನೀರು ಹಾಗೂ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ತಿಳಿಸಲಾಯಿತು. ಜಾತ್ರಾ ಪ್ರದೇಶದಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಕಲ್ಪಿಸಲು ಜೆಸ್ಕಾಂ ಅಧಿಕಾರಿಗಳಿಗೆ ಹಾಗೂ ಹಾಳಾಗಿರುವ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಆದೇಶಿಸಲಾಯಿತು. ಜಾತ್ರೆಯ ಸಮಯದಲ್ಲಿ ಬೆಂಕಿ ಅವಘಡಗಳು ಸಂಭವಿಸದಂತೆ ಅಗ್ನಿಶಾಮಕ ಸಿಬ್ಬಂದಿ ಸಜ್ಜಾಗಿರಬೇಕು, ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಬೇಕು ಹಾಗೂ ಅಕ್ರಮ ಮದ್ಯ ಮಾರಾಟ ತಡೆಯಲು ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ್ ತಾಕೀತು ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಭೀಮಣ್ಣ ಕರಡಳ್ಳಿ, ಮಲ್ಲರೆಡ್ಡಿ ಗೋಪಸೇನ್, ಈರಪ್ಪ ಭೋವಿ ಮುಂತಾದ ಮುಖಂಡರು ಮಾತನಾಡಿ, ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಟಿಪ್ಪರ್‌ಗಳ ಸಂಚಾರದಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು ಭಕ್ತರಿಗೆ ತೊಂದರೆಯಾಗುತ್ತಿದೆ. ಕೂಡಲೇ ರಸ್ತೆ ದುರಸ್ತಿ, ವಿದ್ಯುತ್ ಹಾಗೂ ನೈರ್ಮಲ್ಯ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು. ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಹಾಗೂ ಸಿಪಿಐ ಎಸ್.ಸಿ. ಪಾಟೀಲ ಮಾತನಾಡಿ, ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ತಿಳಿಸಿದರು. ರತ್ನಾಕರ ನಾಯಕ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಜಾತ್ರೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
"ನಾಗಾವಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಈಗಾಗಲೇ 2.19 ಎಕರೆ ಭೂಮಿ ಹಾಗೂ ಪುರಾತತ್ವ ಇಲಾಖೆಗೆ ಸಂಬಂಧಿಸಿದಂತೆ 106.32 ಎಕರೆ ಭೂಮಿಯನ್ನು ಗುರುತಿಸಿ ತಂತಿ ಬೇಲಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಅಭಿವೃದ್ಧಿಯ ನೀಲನಕ್ಷೆ ಸಿದ್ಧವಾಗಿದ್ದು, ಜಾತ್ರೆ ಮುಗಿದ ಬಳಿಕ ಅಭಿವೃದ್ಧಿ ಕೆಲಸಗಳು ಚುರುಕುಗೊಳ್ಳಲಿವೆ"
- ತಹಸೀಲ್ದಾರ್ ನಾಗಯ್ಯ ಹಿರೇಮಠ
ಈ ಸಂದರ್ಭದಲ್ಲಿ ವಿವಿಧ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿ.ವಿ. ಸಂಗಮೇಶ ಕಾರ್ಯಕ್ರಮ ನಿರೂಪಿಸಿದರೆ, ಗ್ರೇಡ್-2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ವಂದಿಸಿದರು.