ಚಿತ್ತಾಪುರ: ಪಟ್ಟಣದ ಶೈಕ್ಷಣಿಕ ಕ್ಷೇತ್ರದಲ್ಲಿ ಮೈಲಿಗಲ್ಲು ಸ್ಥಾಪಿಸಿರುವ ಶ್ರೀ ವಿಶ್ವಗುರು ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ 16ನೇ ವಾರ್ಷಿಕೋತ್ಸವ ಹಾಗೂ ಅಭಿನಂದನ ಗ್ರಂಥ ಬಿಡುಗಡೆ ಸಮಾರಂಭವು ಇದೇ ಫೆಬ್ರವರಿ 23ರಂದು ಬೆಳಗ್ಗೆ 10 ಗಂಟೆಗೆ ಎಂ.ಬಿ. ಪಾಟೀಲ ಪಬ್ಲಿಕ್ ಶಾಲಾ ಆವರಣದಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ನಾಗರೆಡ್ಡಿ ಪಾಟೀಲ ಕರದಾಳ, "ಶತಮಾನದ ಶರಣ, ಅಭಿನವ ಅನ್ನದಾನಿ ಎಂದೇ ಖ್ಯಾತರಾದ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಮೊದಲ ಬಾರಿಗೆ ಚಿತ್ತಾಪುರ ಪಟ್ಟಣಕ್ಕೆ ಆಗಮಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಶ್ರೀಗಳ ದರ್ಶನ ಹಾಗೂ ಆಶೀರ್ವಚನ ಆಲಿಸಲು ತಾಲೂಕಿನ ಜನತೆ ಕಾತರರಾಗಿದ್ದಾರೆ," ಎಂದು ಹರ್ಷ ವ್ಯಕ್ತಪಡಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ದಿವ್ಯ ಸಾನಿಧ್ಯವನ್ನು ಅಬ್ಬೆ ತುಮಕೂರಿನ ಡಾ. ಗಂಗಾಧರ ಮಹಾಸ್ವಾಮಿಗಳು, ಕಂಬಳೇಶ್ವರದ ಶ್ರೀ ಸೋಮಶೇಖರ ಶಿವಾಚಾರ್ಯರು, ದಿಗ್ಗಾಂವದ ಶ್ರೀ ಸಿದ್ದವೀರ ಶಿವಾಚಾರ್ಯರು ಹಾಗೂ ರಾವೂರ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು ಆಶೀರ್ವದಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಡಿಪಿಐ ಶಂಕ್ರಮ್ಮ ಡವಳಗಿ ಹಾಗೂ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಭಾಗವಹಿಸಲಿದ್ದಾರೆ.
ಸಾರ್ವಜನಿಕರಿಗಾಗಿ ಅಚ್ಚುಕಟ್ಟಾದ ವ್ಯವಸ್ಥೆ
ಸಮಾರಂಭಕ್ಕೆ ಆಗಮಿಸುವ ಭಕ್ತರಿಗಾಗಿ ಮತ್ತು ಪೋಷಕರಿಗಾಗಿ ಸಂಸ್ಥೆಯ ವತಿಯಿಂದ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ,ಸುಮಾರು 3,000ಕ್ಕೂ ಹೆಚ್ಚು ಜನರು ಕುಳಿತುಕೊಳ್ಳಲು ಸುಸಜ್ಜಿತ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸುಸಜ್ಜಿತ ಊಟದ ವ್ಯವಸ್ಥೆ ಮಾಡಲಾಗಿದೆ,ಪಟ್ಟಣದ ಪ್ರತಿಯೊಬ್ಬ ನಾಗರಿಕರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು," ಎಂದು ನಾಗರೆಡ್ಡಿ ಪಾಟೀಲರು ಕೋರಿದ್ದಾರೆ.